10 ಎಚ್.ಪಿ. ವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಮಾಸಿಕ ಗರಿಷ್ಠ 250 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದರು.
ವಿಜಯಪುರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಲು ಸರ್ಕಾರ ಕ್ರಮಕೈಗೊಂಡಿದೆ. ಈ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ನೇಕಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್ ನೀಡಲು ಮುಂದಾಗಿದೆ” ಎಂದರು.
“ಈ ಯೋಜನೆ ಅನುಷ್ಠಾನದಿಂದ ರಾಜ್ಯದ ಸುಮಾರು 40 ಸಾವಿರ ನೇಕಾರರಿಗೆ ಅನುಕೂಲವಾಗಲಿದೆ. ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆಯಿಂದ ಮಾಸಿಕ ಅಂದಾಜು ₹150 ಕೋಟಿ ಮೊತ್ತವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಭರಿಸಲಾಗುವುದು” ಎಂದು ಹೇಳಿದರು.
“10 ರಿಂದ 20 ಎಚ್.ಪಿ. ವರೆಗಿನ ವಿದ್ಯುತ್ ಮಗ್ಗ ಹಾಗೂ ಮಗ್ಗಪೂರ್ವ ಘಟಕಗಳಿಗೆ ಪ್ರತಿ ಯುನಿಟ್ಗೆ ₹1.25ರಂತೆ ರಿಯಾಯಿತಿ ದರದಲ್ಲಿ ಮಾಸಿಕ ಗರಿಷ್ಠ 500 ಯುನಿಟ್ ವರೆಗೆ ವಿದ್ಯುತ್ ಪೂರೈಸಲಾಗುವುದು” ಎಂದು ತಿಳಿಸಿದರು
ಉಚಿತ ವಿದ್ಯುತ್ ಸಹಾಯಧನ ಯೋಜನೆಗೆ ನೋಂದಾಯಿಸಿಕೊಳ್ಳಲು ನೇಕಾರರು ತಮ್ಮ ಆಧಾರ್ ಕಾರ್ಡ್, ಪಡಿತರ ಕಾರ್ಡ್, ಮಗ್ಗದ ಚಿತ್ರ, ವಿದ್ಯುತ್ ಸಂಪರ್ಕ ಹೊಂದಿರುವ ದಾಖಲಾತಿ, ಆರ್.ಆರ್.ಸಂಖ್ಯೆ, ಬಿಲ್ ಮತ್ತು ರಸೀದಿ ಸೇರಿದಂತೆ ಇತರೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು” ಎಂದು ವಿವರಿಸಿದರು.
ರಾಜ್ಯದಲ್ಲಿ ಬರಗಾಲ ಇರುವುದರಿಂದ ಈ ಬಾರಿ ಕಬ್ಬಿನ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ. ಹಿಂದಿನ ಹಂಗಾಮುಗಳಲ್ಲಿ ಸಕ್ಕರೆ ಕಾರ್ಖಾನೆಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಬೇರೆ ಬೇರೆ ಅವಧಿಯಲ್ಲಿ ಕಬ್ಬು ನುರಿಸಲು ಆರಂಭಿಸುತ್ತಿರುವುದನ್ನು ತಪ್ಪಿಸಿ, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಏಕಕಾಲಕ್ಕೆ ಕಬ್ಬು ನುರಿಸುವಿಕೆ ಆರಂಭಿಸಲು ಸಕ್ಕರೆ ಕಾರ್ಖಾನೆಗಳಿಗೆ ಈ ನಿರ್ದೇಶನ ನೀಡಲಾಗಿದೆ. ರಾಜ್ಯದಾದ್ಯಂತ ಸಕ್ಕರೆ ಕಾರ್ಖಾನೆಗಳು ಅ.25ರಿಂದಲೇ ಕಬ್ಬು ನುರಿಸಲು ಆರಂಭಿಸುವಂತೆ ಸರ್ಕಾರ ಹೊಸ ಆದೇಶ ಹೊರಡಿಸಿದೆ” ಎಂದು ಇದೇ ವೇಳೆ ತಿಳಿಸಿದರು
0 Comments