2025ನೆ ಸಾಲಿನ ಎಂಜಿನಿಯರಿಂಗ್, ಪಶುವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಎ.16 ಮತ್ತು 17ರಂದು ನಡೆಸಲಿದೆ. ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.23ರಿಂದ ಫೆ.21ರವರೆಗೆ ಅವಕಾಶ ನೀಡಲಾಗಿದೆ.
ಗುರುವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಪ್ರಕಟನೆ ಹೊರಡಿಸಿದ್ದು, ಎ.16ರಂದು ಬೆಳಿಗ್ಗೆ 10.30ಕ್ಕೆ ಭೌತವಿಜ್ಞಾನ, ಮಧ್ಯಾಹ್ನ 2.30ಕ್ಕೆ ರಸಾಯನ ವಿಜ್ಞಾನ ಹಾಗೂ ಎ.17ರಂದು ಬೆಳಿಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಎ.18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದ್ದಾರೆ.
ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸ್ ಮತ್ತು ಬಿಎಸ್ಸಿ(ನರ್ಸಿಂಗ್) ಕೋರ್ಸ್ಗಳ ಪ್ರವೇಶಕ್ಕೂ ಸಿಇಟಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಿಇಟಿ-2025ರ ಅರ್ಜಿಯು ಎಲ್ಲಾ ಕೋರ್ಸುಗಳಿಗೆ ಸಾಮಾನ್ಯ ಅರ್ಜಿಯಾಗಿರುವುದರಿಂದ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಪ್ರವೇಶಾತಿಗೂ ಅಭ್ಯರ್ಥಿಗಳು ಆನ್ಲೈನ್ ಮೂಲಕ ನೊಂದಾಯಿಸಿಕೊಂಡು, ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಆರ್ಕಿಟೆಕ್ಚರ್, ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಾತಿಗೆ ಇದೇ ಅರ್ಜಿ ಅನ್ವಯವಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಭದ್ರತೆಯ ದೃಷ್ಟಿಯಿಂದ ಸಿಇಟಿ ಅರ್ಜಿಯನ್ನು ಭರ್ತಿ ಮಾಡುವ ಮತ್ತು ದಾಖಲೆಗಳ ಪರಿಶೀಲನೆ ವಿಷಯದಲ್ಲಿ ಈ ಬಾರಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಯಾರದ್ದೊ ಅರ್ಜಿಯನ್ನು ಇನ್ಯಾರೊ ಭರ್ತಿ ಮಾಡಲು ಸಾಧ್ಯವೇ ಇರುವುದಿಲ್ಲ. ಪ್ರತಿ ಹಂತದಲ್ಲಿ ಪ್ರಮಾಣಿಕರಿಸಿಯೇ ಮುಂದಿನ ಪ್ರಕ್ರಿಯೆ ನಡೆಸಲಾಗುತ್ತದೆ. ಇದರಿಂದ ಅಕ್ರಮಗಳಿಗೆ ತಡೆ ಹಾಕಿದಂತಾಗಲಿದೆ ಎಂದು ಅವರು ವಿವರಿಸಿದ್ದಾರೆ.
0 Comments